|
ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ
ಹೊಂಗೆ ಹೂವ ತೊಂಗಲಲ್ಲಿ ಭೃಂಗದ ಸಂಗೀತ ಕೇಳಿ ಮತ್ತೆ ಕೇಳಬರುತಿದೆ ಬೇವಿನ ಕಹಿ ಬಾಳಿನಲ್ಲಿ ಹೂವಿನ ನಸುಗಂಪು ಸೂಸಿ ಜೀವಕಳೆಯ ತರುತಿದೆ
ವರುಷಕೊಂದು ಹೊಸತು ಜನ್ಮ ಹರುಷಕೊಂದು ಹೊಸತು ನೆಲೆಯು ಅಖಿಲ ಜೀವಜಾತಕೆ ಒಂದೆ ಒಂದು ಜನ್ಮದಲ್ಲಿ ಒಂದೆ ಬಾಲ್ಯ ಒಂದೆ ಹರಯ ನಮಗದಷ್ಟೇ ಏತಕೋ
ನಿದ್ದೆಗೊಮ್ಮೆ ನಿತ್ಯ ಮರಣ ಎದ್ದ ಸಲ ನವೀನ ಜನನ ನಮಗೆ ಏಕೆ ಬಾರದೋ ಎಲೇ ಸನತ್ಕುಮಾರದೇವ ಎಲೇ ಸಾಹಸಿ ಚಿರಂಜೀವ ನಿನಗೆ ಲೀಲೆ ಸೇರದೋ
ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ ನಮ್ಮನಷ್ಟೆ ಮರೆತಿದೆ
- ಆಂಬಿಕಾತನಯದತ್ತ (ದ.ರಾ. ಬೇಂದ್ರೆ )
|