|
ಬಾಗಿಲೊಳು ಕೈಮುಗಿದು ಒಳಗೆ ಬಾ ಯಾತ್ರಿಕನೆ ಶಿಲೆಯಲ್ಲವೀ ಗುಡಿಯು ಕಲೆಯ ಬಲೆಯು ಕಂಬನಿಯ ಮಾಲೆಯನು ಎದೆಯ ಬಟ್ಟಲೊಳಿಟ್ಟು ಧನ್ಯತೆಯ ಕುಸುಮಗಳ ಅರ್ಪಿಸಿಲ್ಲಿ
ಗಂಟೆಗಳ ದನಿಯಿಲ್ಲ ಜಾಗಟೆಗಳಿಲ್ಲಿಲ್ಲ ಕರ್ಪೂರದಾರತಿಯ ಜ್ಯೋತಿಯಿಲ್ಲ ಭಗವಂತ ತಾನೆಂಬ ರೂಪುಗೊಂಡಿಹುದಿಲ್ಲಿ ರಸಿಕತೆಯ ಕಡಲುಕ್ಕಿ ಹರಿವುದಿಲ್ಲಿ
ಸರಸದಿಂದುಲಿಯುತಿದೆ ಶಿಲೆಯು ರಾಮಾಯಣವಿಲ್ಲಿ ಬಾದರಾಯಣನಂತೆ ಭಾರತವು ಹಾಡುತಿಹುದಿಲ್ಲಿ ಕುಶಲತೆಗೆ ಬೆರಗಾಗಿ ಮೂಕವಾಗಿದೆ ಕಾಲವಿಲ್ಲಿ ಮೂರ್ಛೆಯಲಿ ಮೈಮರೆತು ಕೇಳುವುದು ಭೂಭಾರವಿಲ್ಲಿ
- ಕುವೆಂಪು
|